ಮುಖ್ಯಾಂಶಗಳು:




- ನೀರು ಕೇಳುವ ನೆಪದಲ್ಲಿ ಮನೆಯೊಳಗೆ ತೆರಳಿ ಅತ್ಯಾಚಾರ
- 2016ರ ಫೆ.25ರಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
- 9 ಮಂದಿ ಸಾಕ್ಷಿದಾರರನ್ನು ವಿಚಾರಿಸಿ 20 ದಾಖಲೆಗಳನ್ನು ಗುರುತಿಸಲಾಗಿತ್ತು.
![]() ![]() |
ದ.ಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(KADABA TIMES) |
ಕಡಬ:
ಅತ್ಯಾಚಾರ ಪ್ರಕರಣದ ಆರೋಪಿಗೆ
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ
ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ನೀಡಿದ್ದಾರೆ.
ಕಡಬ
ತಾಲೂಕು ಕುಟ್ರುಪ್ಪಾಡಿ
ಗ್ರಾಮದ ಜಗನ್ನಾಥ್ ಕೆ. ಮೊಗೇರ (38) ಶಿಕ್ಷೆಗೊಳಗಾದ ಆರೋಪಿ. ಈತ ತನ್ನ ದೂರದ
ಸಂಬಂಧಿ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಬಗ್ಗೆ 2016ರ ಫೆ.25ರಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಮನೆಯಲ್ಲಿ
ತಾನು ಮಾತ್ರ ಇದ್ದಾಗ ಆರೋಪಿ ಜಗನ್ನಾಥ್ ನೀರು ಕೇಳುವ ನೆಪದಲ್ಲಿ ಮನೆಯೊಳಗೆ ತೆರಳಿ ಅತ್ಯಾಚಾರವೆಸಗಿದ್ದ ಮತ್ತು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದ. ಆ ನಂತರವೂ ಬೆದರಿಕೆ
ಹಾಕಿ ಹಲವು ಬಾರಿ ಅತ್ಯಾಚಾರವೆಸಗಿದ್ದ. ತಾನು ಗರ್ಭಿಣಿಯಾದ ವಿಷಯ ತಿಳಿದ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು ಎಂದು ಯುವತಿ ಪೊಲೀಸರಿಗೆ ಹೇಳಿಕೆ ನೀಡಿದ್ದಳು.
ಅದರಂತೆ
ಪ್ರಕರಣ ದಾಖಲಿಸಿದ್ದ ಅಂದಿನ ವೃತ್ತ ನಿರೀಕ್ಷಕ ಅನಿಲ್ ಎಸ್.ಕುಲಕರ್ಣಿ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆಯ ವೇಳೆ 9 ಮಂದಿ ಸಾಕ್ಷಿದಾರರನ್ನು ವಿಚಾರಿಸಿ 20 ದಾಖಲೆಗಳನ್ನು ಗುರುತಿಸಲಾಗಿತ್ತು.


ಆರೋಪಿಯ
ಕೃತ್ಯ ಸಾಬೀತಾಗಿರುವುದನ್ನು ತೀರ್ಮಾನಿಸಿದ ನ್ಯಾಯಾಧೀಶರು ಭಾರತೀಯ ದಂಡ ಸಂಹಿತೆಯ ಕಲಂ 376ರಡಿ 10 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆ ಮತ್ತು 5,000 ರೂ. ದಂಡ, ಕಲಂ 506ರಡಿ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 2 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ ಸಂತ್ರಸ್ತೆಗೆ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಪ್ರಾಸಿಕೂಷನ್ ಪರವಾಗಿ ಸರಕಾರಿ ಅಭಿಯೋಜಕ ಚೌಧರಿ ಮೋತಿಲಾಲ್ ವಾದಿಸಿದ್ದರು.