ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.
ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.
ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.