ಕಡಬ ಟೈಮ್, ಪ್ರಮುಖ ಸುದ್ದಿ: ರಾಜ್ಯದಲ್ಲಿ ಮೂರೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸುವ ಸಂಬಂಧ ಸೋಮವಾರ ಹೈಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆದಿದೆ.


ಅದರಂತೆ ಇಂದು ನಡೆದ ವಿಚಾರಣೆಯ ವೇಳೆ ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಹೇಳಿದೆ. ಅದರ ಬಳಿಕ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ನಿಗದಿಪಡಿಸಬಹುದು ಎಂದು ಸರ್ಕಾರ ಹೇಳಿದೆ.


ಏನೇ ಆಗಲಿ ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿ ಚುನಾವಣಾ ಆಯೋಗಕ್ಕೆ ಕೊಡಲಾಗುವುದು, ಜೂನ್-ಜುಲೈ ತಿಂಗಳಲ್ಲಿ ಚುನಾವಣಾ ಆಯೋಗ ಚುನಾವಣೆಗಳನ್ನು ನಡೆಸಬಹುದು ಎಂದು ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹೇಳಿದರು. ಸರ್ಕಾರ ಮೀಸಲಾತಿ ಪಟ್ಟಿ ಕೊಡಲಿ, ಅಯೋಗ ದಿನಾಂಕ ನಿಗದಿಪಡಿಸಿಕೊಳ್ಳಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣಿಂದ್ರ ತಿಳಿಸಿದರು.


ನಿಗದಿತ ಅವಧಿಯೊಳಗೆ ಜಿ.ಪಂ ತಾ.ಪಂ ಚುನಾವಣೆಗಳನ್ನು ನಡೆಸುವಂತೆ ಅನುವು ಮಾಡಿಕೊಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಹಾಗೂ ನ್ಯಾ. ಎಂ.ಐ ಅರುಣ್ ಅವರಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.


ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಸರಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಸರಕಾರ ವಿಫಲವಾಗಿದ್ದು, ಆದಷ್ಟು ಬೇಗ ಮೀಸಲಾತಿ ಪಟ್ಟಿ ಕೊಟ್ಟು ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣ ಆಯೋಗ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.