
ಮಹಾತ್ಮ ಗಾಂಧಿ ಉದ್ಯೋಗಖಾತ್ರಿ ಯೋಜನೆಗೆ ಹೆಸರು ಬದಲಿಸಿರುವುದನ್ನು ಖಂಡಿಸಿ ಫೆಬ್ರವರಿ 7ರಂದು ಕಡಬದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಯಲಿದೆ.


ಕಡಬ: ಕೇಂದ್ರದ ಎನ್ಡಿಎ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ (MGNREGA) ಹೆಸರನ್ನು ‘ವಿಬಿ ರಾಮ್ ಜಿ’ ಎಂದು ಮರುನಾಮಕರಣ ಮಾಡಿರುವುದನ್ನು ಖಂಡಿಸಿ, ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಫೆಬ್ರವರಿ 7ರ ಶನಿವಾರ ಸಂಜೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗುರುವಾರ ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ, “ಮಹಾತ್ಮ ಗಾಂಧೀಜಿಯವರ ಹೆಸರನ್ನು ಕೈಬಿಡುವ ಮೂಲಕ ಕೇಂದ್ರ ಸರ್ಕಾರ ರಾಷ್ಟ್ರಪಿತನಿಗೆ ಅವಮಾನ ಮಾಡಿದೆ. ಯೋಜನೆಯ ಹೆಸರನ್ನು ಮೊದಲಿನಂತೆಯೇ ಮುಂದುವರಿಸಬೇಕು ಎಂದು ಆಗ್ರಹಿಸಿ ಮರ್ಧಾಳ ವೃತ್ತದಿಂದ ಕಡಬ ತಹಸೀಲ್ದಾರ್ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಲಾಗುವುದು,” ಎಂದರು.


ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಮಾಧ್ಯಮ ವಕ್ತಾರ ಗಂಗಾಧರ ಶೆಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದು, ಕೇಂದ್ರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
