
ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಬ್ರಾಂತಿಕಟ್ಟೆ ಬಳಿ ಇಕೋ ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಸಾಗರ ಮೂಲದ 9 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.


ಕಡಬ: ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಿದ್ದ ಇಕೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಒಂಬತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮೂವರ ಸ್ಥಿತಿ ಗಂಭೀರ
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು 9 ಜನರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಜುನಾಥ, ಪ್ರಮೋದ್ ಮತ್ತು ತುಳಸಿ ಎಂದು ಗುರುತಿಸಲಾಗಿದೆ. ಉಳಿದಂತೆ ಪ್ರಿಯಾ, ಸಂಜನಾ ,ವಿಠಲ, ಚಾಲಕ ಪ್ರೇಮಣ್ಣ, ಧನಲಕ್ಷ್ಮಿ ಹಾಗೂ ಸಮರ್ಥ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ತಿಳಿದುಬಂದಿದೆ.


ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಧಾವಿಸಿ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಂಭೀರವಾಗಿ ಗಾಯಗೊಂಡವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆ ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಕಡಬ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಅತಿಯಾದ ವೇಗ ಅಥವಾ ಚಾಲಕನ ಹಠಾತ್ ನಿಯಂತ್ರಣ ತಪ್ಪಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗುವ ಪ್ರಕ್ರಿಯೆ ನಡೆಯುತ್ತಿದೆ.
