
ರಬ್ಬರ್ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದೆ. ಟ್ಯಾಪಿಂಗ್ ಕಾರ್ಮಿಕರ ಕಣ್ಣಿಗೆ ಬಿದ್ದ ಚಿರತೆಯ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಅಲವೂರು ಎಂಬಲ್ಲಿ ರವಿವಾರ ಬೆಳಗ್ಗಿನ ಜಾವ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಅಲವೂರಿನ ಬಾಬಿ ಎಂಬವರ ಎಸ್ಟೇಟ್ನ ರಬ್ಬರ್ ತೋಟದಲ್ಲಿ ಎಪ್ರಿಲ್ 5 ರಂದು ಮುಂಜಾನೆ ಈ ಘಟನೆ ಸಂಭವಿಸಿದೆ. ಎಂದಿನಂತೆ ಬೆಳಗ್ಗೆ ಸುಮಾರು 5 ಗಂಟೆಯ ವೇಳೆಗೆ ರಬ್ಬರ್ ಟ್ಯಾಪಿಂಗ್ ಕೆಲಸಕ್ಕಾಗಿ ನಾಗಮ್ಮ ಎಂಬ ಮಹಿಳಾ ಕಾರ್ಮಿಕರು ತೆರಳಿದ್ದರು. ಈ ಸಂದರ್ಭದಲ್ಲಿ ಅವರಿಗೆ ಚಿರತೆಯೊಂದು ತೋಟದಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ.


ವೈರಲ್ ಆದ ವಿಡಿಯೋ: ಚಿರತೆಯನ್ನು ಕಂಡ ನಾಗಮ್ಮ ಅವರು ಧೈರ್ಯಗುಂದದೆ ತಮ್ಮ ಮೊಬೈಲ್ ಫೋನ್ನಲ್ಲಿ ಅದರ ವಿಡಿಯೋ ಮತ್ತು ಫೋಟೋಗಳನ್ನು ಸೆರೆಹಿಡಿದಿದ್ದಾರೆ. ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಜನರಲ್ಲಿ ಭೀತಿ ಹೆಚ್ಚಿಸಿದೆ. ಕಳೆದ ಕೆಲವು ದಿನಗಳಿಂದ ಬೆಳ್ತಂಗಡಿ ತಾಲೂಕಿನ ಯಾವುದೇ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರಲಿಲ್ಲ.
ಇದೀಗ ಮತ್ತೆ ಜನವಸತಿ ಪ್ರದೇಶದ ಸಮೀಪವಿರುವ ತೋಟಗಳಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಸಾರ್ವಜನಿಕರನ್ನು ನಿದ್ದೆಗೆಡಿಸಿದೆ. ಮುಂಜಾನೆ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಹಾಗೂ ಶಾಲಾ ಮಕ್ಕಳು ಭಯದಲ್ಲೇ ಓಡಾಡುವಂತಾಗಿದೆ. ಅರಣ್ಯ ಇಲಾಖೆಯು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಚಿರತೆಯನ್ನು ಸೆರೆಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
