
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ತುಮಕೂರು ಮೂಲದ ನರೇಂದ್ರ (50) ಎಂಬುವವರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು.


ಧರ್ಮಸ್ಥಳ: ಇಲ್ಲಿನ ಪುಣ್ಯಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಶನಿವಾರ (ಏಪ್ರಿಲ್ 11) ಸಂಜೆ ವ್ಯಕ್ತಿಯೊಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ (50) ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಶನಿವಾರ ಸಂಜೆ ನೇತ್ರಾವತಿ ನದಿಯ ಸ್ನಾನಘಟ್ಟದ ಬಳಿ ಬಂದ ನರೇಂದ್ರ, ತಾನು ಮೊದಲೇ ತಂದಿದ್ದ ಕ್ಯಾನ್ನಲ್ಲಿದ್ದ ಪೆಟ್ರೋಲನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.
ಇದನ್ನು ಗಮನಿಸಿದ ಸ್ಥಳೀಯರು ಮತ್ತು ಭಕ್ತರು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿ, ಅವರನ್ನು ರಕ್ಷಿಸಿದ್ದಾರೆ. ಕೂಡಲೇ ಅವರನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.


ಪೊಲೀಸ್ ವಿಚಾರಣೆ: ವಿಷಯ ತಿಳಿಯುತ್ತಿದ್ದಂತೆ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಆಸ್ಪತ್ರೆಗೆ ಭೇಟಿ ನೀಡಿ ವ್ಯಕ್ತಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅವರು ತಮ್ಮ ಹೆಸರು ಮತ್ತು ವಿಳಾಸವನ್ನು ತಿಳಿಸಿದ್ದು, ತಾನೇ ಪೆಟ್ರೋಲ್ ತಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ, ಈ ತೀವ್ರ ನಿರ್ಧಾರಕ್ಕೆ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ.
ಧರ್ಮಸ್ಥಳ ಪೊಲೀಸರು ನರೇಂದ್ರ ಅವರ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಅವರು ಆಗಮಿಸಿದ ಬಳಿಕವಷ್ಟೇ ಆತ್ಮಹತ್ಯೆಯ ಯತ್ನಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬರಬೇಕಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
