
ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಏಪ್ರಿಲ್ 24ರಂದು ಘಟನೆ ಬೆಳಕಿಗೆ ಬಂದಿದೆ.


ಪಂಜ: ಇಲ್ಲಿನ ಪೇಟೆಯ ಬಾಡಿಗೆ ಕೊಠಡಿಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಶುಕ್ರವಾರ (ಏಪ್ರಿಲ್ 24) ಬೆಳಕಿಗೆ ಬಂದಿದೆ.
ಮೃತರನ್ನು ಉಮೇಶ್ ಎಂದು ಗುರುತಿಸಲಾಗಿದೆ. ಇವರು ಕಳೆದ ಹಲವು ಸಮಯಗಳಿಂದ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಪಂಜ ಪೇಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.


ಶುಕ್ರವಾರದಂದು ಉಮೇಶ್ ವಾಸವಿದ್ದ ಕೊಠಡಿಯಿಂದ ವಿಪರೀತ ವಾಸನೆ ಬರುತ್ತಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಕೂಡಲೇ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮನೆಯನ್ನು ಪರಿಶೀಲಿಸಿದಾಗ ಉಮೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರು ಕೆಲವು ದಿನಗಳ ಹಿಂದೆಯೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿಗೆ ನಿಖರವಾದ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಮೃತರ ಕುಟುಂಬದವರು ಘಟನೆಯಿಂದ ಆಘಾತಕ್ಕೊಳಗಾಗಿದ್ದಾರೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ…
