
ಬಲ್ಯ ಗ್ರಾಮದ ನೆಲ್ಯಾಡಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಹುಬ್ಬಳ್ಳಿ ಮೂಲದ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.


ಕಡಬ: ತಾಲೂಕಿನ ಬಲ್ಯ ಗ್ರಾಮದ ನೆಲ್ಯಾಡಿ ಕ್ರಾಸ್ ಬಳಿ ಶನಿವಾರ ಮಧ್ಯಾಹ್ನ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಾಯಗೊಂಡ ಘಟನೆ ನಡೆದಿದೆ.
ಹುಬ್ಬಳ್ಳಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದರ್ಶನಕ್ಕಾಗಿ ಸ್ನೇಹಿತರ ತಂಡದೊಂದಿಗೆ ಆರು ಬೈಕ್ಗಳಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಯಾಡಿ ಕ್ರಾಸ್ ತಲುಪಿದಾಗ, ಒಳರಸ್ತೆಯಿಂದ ಮುಖ್ಯ ರಸ್ತೆಗೆ ಏಕಾಏಕಿ ಬಂದ ಕಾರು ಪ್ರಶಾಂತ್ ಎಂಬವರು ಚಲಾಯಿಸುತ್ತಿದ್ದ ಬೈಕ್ಗೆಡಿಕ್ಕಿ ಹೊಡೆದಿದೆ.


ಅಪಘಾತದ ರಭಸಕ್ಕೆ ಬೈಕ್ ಸವಾರ ಪ್ರಶಾಂತ್ (25) ಅವರ ಕೈಕಾಲುಗಳಿಗೆ ರಕ್ತಗಾಯವಾಗಿದ್ದು, ಹಿಂಬದಿ ಸವಾರ ಷಣ್ಮುಖಪ್ಪ (39) ಅವರ ಬಲ ಭುಜ ಹಾಗೂ ದೇಹದ ಇತರೆ ಭಾಗಗಳಿಗೆ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಕಡಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರು ಚಾಲಕ ರವಿ ಸಂಪಂಗಿ ಎಂಬವರು ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಸಹ ಸವಾರ ಅಕ್ಷಯ ಕುಮಾರ್ ಪಿ. ಹುಗ್ಗಿ ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಡಬ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 281 ಮತ್ತು 125(a) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
