
ಕಡಬದ ಐತ್ತೂರು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಮನಸ್ತಾಪವೊಂದು ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಭೀಕರ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದಲ್ಲಿ ಇಂದು (ಮಂಗಳವಾರ) ಮುಂಜಾನೆ ನಡೆದಿದೆ.
ಐತ್ತೂರು ಗ್ರಾಮದ ಕೆರ್ಮಾಯಿ ಪಾದೆ ಮಜಲು ಎಂಬಲ್ಲಿ ಈ ಘಟನೆ ಸಂಭವಿಸಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಆಸ್ತಿ ವಿಚಾರವಾಗಿ ಕುಟುಂಬದೊಳಗೆ ಮನಸ್ತಾಪವಿತ್ತು ಎನ್ನಲಾಗಿದೆ. ಇಂದು ಮುಂಜಾನೆ ಆರೋಪಿಯು ಮನೆಯ ಸುತ್ತಲೂ ಪೆಟ್ರೋಲ್ ಸುರಿದು ಬಳಿಕ ಮಹಿಳೆಯ ಮೇಲೆಯೂ ಪೆಟ್ರೋಲ್ ಸುರಿದು ಜೀವಂತ ದಹನ ಮಾಡಲು ಯತ್ನಿಸಿದ್ದಾನೆ.
ಸ್ಥಳೀಯರ ಸಮಯಪ್ರಜ್ಞೆ: ಮಹಿಳೆ ಮತ್ತು ಮಕ್ಕಳು ಪ್ರಾಣಭಯದಿಂದ ಜೋರಾಗಿ ಕಿರುಚಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಜನರ ಆಗಮನದಿಂದಾಗಿ ಸಂಭಾವ್ಯ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.


ಘಟನೆಯಿಂದ ಆಘಾತಕ್ಕೊಳಗಾದ ಮಹಿಳೆಯನ್ನು ತಕ್ಷಣವೇ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯ ಆರೋಗ್ಯ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಕಡಬ ಪೊಲೀಸರು, ಕೃತ್ಯವೆಸಗಿದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆಯಿದ್ದು, ತನಿಖೆ ಮುಂದುವರಿದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
