
ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯೋರ್ವರನ್ನು ನಂಬಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿವಾಹಿತ ವ್ಯಕ್ತಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.


ಮೂಡುಬಿದಿರೆ ಸಮೀಪದ ನಿವಾಸಿ, ವೃತ್ತಿಯಲ್ಲಿ ಲಾರಿ ಚಾಲಕನಾಗಿರುವ ವಿವಾಹಿತ ಲೋಕೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಆರೋಪಿ ಸಂತ್ರಸ್ತ ವಿದ್ಯಾರ್ಥಿನಿಗೆ ಮೊದಲೇ ಪರಿಚಯಸ್ಥನಾಗಿದ್ದ ಎನ್ನಲಾಗಿದೆ. ಕಾಲೇಜು ಮುಗಿದ ಬಳಿಕ ಯುವತಿಯು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ದಾರಿಯಲ್ಲಿ ಸಿಕ್ಕ ಲೋಕೇಶ್ ತನ್ನ ಬೈಕ್ನಲ್ಲಿ ಕೂರಿಸಿಕೊಂಡು ಹೋಗಿದ್ದಾನೆ.


ಹೋಗುವ ದಾರಿ ಮಧ್ಯೆ ತಾನು ಹೊಸದಾಗಿ ನಿರ್ಮಿಸುತ್ತಿರುವ ಮನೆಯನ್ನು ತೋರಿಸುವುದಾಗಿ ಹೇಳಿ ವಿದ್ಯಾರ್ಥಿನಿಯನ್ನು ಮನೆಯೊಳಗೆ ಕರೆದೊಯ್ದಿದ್ದಾನೆ. ಬಳಿಕ ಅಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಕಡೆಯಿಂದ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
