
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ತಲುಪಿಸುವುದಾಗಿ ನಂಬಿಸಿ ದ್ವಿಚಕ್ರ ವಾಹನದಲ್ಲಿ ಕರೆತಂದು, ದಾರಿ ಮಧ್ಯೆ ಆಕೆಗೆ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.


ಪಡೀಲ್ ನಿವಾಸಿ ಅದ್ದು ಪಡೀಲ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿ.
ಘಟನೆಯ ವಿವರ: ದಿನಾಂಕ 23.08.2026 ರಂದು ರಾತ್ರಿ ವೇಳೆ ಈ ಘಟನೆ ನಡೆದಿದೆ. ಸಂತ್ರಸ್ತ ಅಪ್ರಾಪ್ತ ಬಾಲಕಿಯು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ಆಕೆಯನ್ನು ಮನೆಗೆ ಬಿಡುವುದಾಗಿ ಆರೋಪಿ ಅದ್ದು ಪಡೀಲ್ ತನ್ನ ದ್ವಿಚಕ್ರ ವಾಹನದಲ್ಲಿ (ಬೈಕ್) ಹತ್ತಿಸಿಕೊಂಡಿದ್ದಾನೆ.
ಆದರೆ, ಮನೆಗೆ ಕರೆದೊಯ್ಯುವ ದಾರಿ ಮಧ್ಯೆ ಆರೋಪಿಯು ಬಾಲಕಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಆಘಾತಕ್ಕೊಳಗಾದ ಬಾಲಕಿ ಮನೆಗೆ ಬಂದು ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ಈ ಸಂಬಂಧ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.


ಪೋಕ್ಸೋ ಹಾಗೂ ಬಿಎನ್ಎಸ್ ಅಡಿ ಪ್ರಕರಣ ದಾಖಲು:
ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 46/2026 ಕಲಂಗಳು: 75 ಭಾರತೀಯ ನ್ಯಾಯ ಸಂಹಿತೆ (BNS 2023) ಹಾಗೂ ಕಲಂ 8, 12 ಪೋಕ್ಸೋ ಕಾಯ್ದೆ (POCSO Act 2012)ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಯ ಪತ್ತೆ ಹಾಗೂ ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
