
ಕಡಬ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರಾಕೃತಿಕ ವಿಕೋಪ ಹಾನಿಗಳ ಕುರಿತು ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ದರ್ಶನ್ ಹೆಚ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.


ಕಡಬ ತಾಲೂಕಿನಾದ್ಯಂತ ಸತತವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದಾಗಿ ಉಂಟಾಗಿರುವ ಹಾನಿಗಳ ಕುರಿತು ತುರ್ತು ಸ್ಪಂದನೆ ಹಾಗೂ ಪರಿಹಾರ ಕಾರ್ಯಗಳ ಕುರಿತು ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪರಿಶೀಲನಾ ಸಭೆ ಜರುಗಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಕೃತಿ ವಿಕೋಪ ಪರಿಹಾರ, ತಡೆಗೋಡೆ ನಿರ್ಮಾಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಸಮಗ್ರ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಸಚಿವ ಯು.ಟಿ. ಖಾದರ್ ಅವರು, “ಮಳೆಯಿಂದಾಗಿ ಹಾನಿಗೊಳಗಾದ ರಸ್ತೆ, ಸೇತುವೆ, ವಿದ್ಯುತ್ ಕಂಬಗಳು ಹಾಗೂ ಕೃಷಿ ಭೂಮಿಗಳಿಗೆ ತಕ್ಷಣವೇ ತಾತ್ಕಾಲಿಕ ಹಾಗೂ ಕಾಯಂ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು” ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.


ಸಭೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು, ತಮ್ಮ ತಮ್ಮ ಇಲಾಖೆಗಳಲ್ಲಿ ಹಾನಿಯಾದ ನಷ್ಟ ಹಾಗೂ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ವರದಿಯನ್ನು ಸಲ್ಲಿಸಿದರು
ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ,ದ.ಕ ಜಿಲ್ಲಾಧಿಕಾರಿ ದರ್ಶನ್ ಹೆಚ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. (IPS),ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿನರ್ವಾಡೆ ವಿನಾಯಕ್ ಕಾರ್ಭಾರಿ, ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮ್ಮನಾ ಜುಬಿನ್ ಸೇರಿದಂತೆ ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಹಿರಿಯ ಆಡಳಿತಾಧಿಕಾರಿಗಳು ಭಾಗವಹಿಸಿದ್ದರು.
