
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭವತಿಯನ್ನಾಗಿಸಿದ ಆಟೋ ಚಾಲಕನಿಗೆ ಮಂಗಳೂರು ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.


ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೊಕ್ಸೊ-ಎಫ್ಟಿ ಎಸ್ಸಿ-2) ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ಶಿಕ್ಷೆಗೊಳಗಾದ ಆರೋಪಿಯನ್ನು ಮೂಲತಃ ಬಾಗಲಕೋಟೆಯ ನಾಗರಾಜ್ ಶಿವಪ್ಪದುರಗಣ್ಣವರ (21) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯು ತನ್ನ ತಾಯಿಯ ಪರಿಚಯದ ಮಹಿಳೆಯ ಪುತ್ರಿಯ ಜೊತೆ ಅನ್ಯೋನ್ಯವಾಗಿದ್ದು, ಆಕೆಯ ಮನೆಗೂ ಆಗಾಗ್ಗೆ ಹೋಗುತ್ತಿದ್ದ ಎನ್ನಲಾಗಿದೆ.
2025ರ ಫೆಬ್ರವರಿ 25 ಮತ್ತು ಮಾರ್ಚ್ 13ರಂದು ಅತ್ತಾವರದಲ್ಲಿರುವ ತನ್ನ ಬಾಡಿಗೆ ಮನೆಗೆ ಬಾಲಕಿಯನ್ನು ಕರೆದುಕೊಂಡು ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದ. ಪರಿಣಾಮ ಬಾಲಕಿ ಗರ್ಭವತಿಯಾಗಿದ್ದು, ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ನ್ಯಾಯಾಲಯದ ತೀರ್ಪು ಮತ್ತು ಶಿಕ್ಷೆ: ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯು ದೋಷಿ ಎಂದು ಘೋಷಿಸಿ ಶಿಕ್ಷೆ ವಿಧಿಸಿದ್ದಾರೆ.


ಪೊಕ್ಸೊ ಕಲಂ 6 ರಡಿ: 20 ವರ್ಷ ಕಠಿಣ ಸಜೆ ಮತ್ತು 40,000 ರೂ. ದಂಡ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 4 ತಿಂಗಳು ಸಾದಾ ಸಜೆ.
-
ಬಿಎನ್ಎಸ್ ಕಲಂ 69 ರಡಿ: 5 ವರ್ಷ ಸಾದಾ ಸಜೆ ಮತ್ತು 10,000 ರೂ. ದಂಡ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ ಒಂದು ತಿಂಗಳ ಸಜೆ.
-
ಸಂತ್ರಸ್ತೆಗೆ ಪರಿಹಾರ: ದಂಡದ ಒಟ್ಟು ಮೊತ್ತ 50,000 ರೂ.ಗಳ ಜೊತೆಗೆ, 6.50 ಲಕ್ಷ ರೂ.ಗಳನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಮಹಿಳಾ ಠಾಣಾಧಿಕಾರಿ ಬಾಲಕೃಷ್ಣ ಎಚ್.ಎನ್. ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಪರವಾಗಿ ಪೊಕ್ಸೊ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ವಾದ ಮಂಡಿಸಿದ್ದರು.
