
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಹಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಶ್ವನ್ ಗೌಡನಿಗೆ ಸುಳ್ಯ ನ್ಯಾಯಾಲಯವು ಒಂದು ವರ್ಷ ಸಾದಾರಣ ಸಜೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ


ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಿಂದ ಹಣ ಕಳವು ಮಾಡಿ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗೆ ಸುಳ್ಯದ ಮಾನ್ಯ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಒಂದು ವರ್ಷದ ಸಾದಾರಣ ಸಜೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಪ್ರಕರಣದ ಹಿನ್ನೆಲೆ: 2019ರ ಜೂನ್ 5ರಂದು ರಾತ್ರಿ ಸುಮಾರು 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸನ್ನಿಧಿಯ ಮುಂಭಾಗದ ಹುಂಡಿಯಿಂದ ₹ 1,885/- ರೂಪಾಯಿಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಸುಬ್ರಹ್ಮಣ್ಯ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು. 2019ರ ಮೇ 17 ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ವಿಚಾರಣೆ ಮತ್ತು ಶಿಕ್ಷೆ: ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2025ರ ಮೇ 17ರಂದು ಆರೋಪಿಯು ತಪ್ಪಿತಸ್ಥ ಎಂದು ಸಾಬೀತುಪಡಿಸಿತ್ತು. ಆ ಸಂದರ್ಭದಲ್ಲಿ ಮಾನ್ಯ ನ್ಯಾಯಾಧೀಶರು ಆರೋಪಿಯನ್ನು PO Act (Probation of Offenders Act) ಅಡಿಯಲ್ಲಿ ಬಿಡುಗಡೆ ಮಾಡಿದ್ದರು. ಆದರೆ, ಬಿಡುಗಡೆಯಾದ ನಂತರ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ಸತತವಾಗಿ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ವಿರುದ್ಧ ವಾರೆಂಟ್ ಹೊರಡಿಸಿತ್ತು.


ಪೊಲೀಸ್ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಆರೋಪಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಗುಂಗೂರುಮಳೆ ನಿವಾಸಿ ಅಶ್ವನ್ ಗೌಡ ಜೆ.ಪಿ. ಎಂಬಾತನನ್ನು ಪತ್ತೆಹಚ್ಚುವಲ್ಲಿ ಸುಬ್ರಹ್ಮಣ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರ್ಚ್ 24, 2026ರಂದು ಸುಬ್ರಹ್ಮಣ್ಯ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹೇಶ್ (HC 369) ಮತ್ತು ಕಾನ್ಸ್ಟೇಬಲ್ ಕಿರಣ (PC 475) ಅವರ ತಂಡವು ತಿಪಟೂರಿನಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದೆ.
ನ್ಯಾಯಾಲಯದ ಅಂತಿಮ ತೀರ್ಪು: ದಸ್ತಗಿರಿಯಾದ ಆರೋಪಿಯನ್ನು ಮಾರ್ಚ್ 25, 2026ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಶಿವಣ್ಣ ಹೆಚ್.ಆರ್. ರವರು, ಆರೋಪಿಗೆ ಕಲಂ 380 IPC ಅಡಿಯಲ್ಲಿ ಒಂದು ವರ್ಷ ಸಾದಾರಣ ಸಜೆ ಮತ್ತು 1,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 10 ದಿನಗಳ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ಸರ್ಕಾರಿ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಪ್ರೀತಿ ಎಮ್.ಸಿ. ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.
