
ಕಡಬ ಪಟ್ಟಣ ಪಂಚಾಯತ್ ಅಭಿವೃದ್ಧಿಗೆ ವಿಶೇಷ ಅನುದಾನ ಕೋರಿ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಅವರಿಗೆ ಅಧ್ಯಕ್ಷೆ ತಮನ್ನಾ ಜಬೀನ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.


ಮಂಗಳೂರು ಮಹಾನಗರಪಾಲಿಕೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 200 ಕೋಟಿ ರೂ. ಮೊತ್ತದ ಯೋಜನೆಯ ಶಿಲಾನ್ಯಾಸ ಸಮಾರಂಭಕ್ಕೆ ಆಗಮಿಸಿದ ರಾಜ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಸುರೇಶ್ ಬಿ.ಎಸ್. ಅವರಿಗೆ ಕಡಬ ಪಟ್ಟಣ ಪಂಚಾಯತ್ ವತಿಯಿಂದ ವಿಶೇಷ ಅಭಿವೃದ್ಧಿ ಅನುದಾನ ಕೋರಿ ಮನವಿ ಸಲ್ಲಿಸಲಾಯಿತು.
ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತಮನ್ನಾ ಜಬೀನ್ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗವು, ನೂತನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಸಚಿವರ ಗಮನ ಸೆಳೆದರು.


ಕಡಬವು ವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿದ್ದು, ಇಲ್ಲಿನ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ, ವೈಜ್ಞಾನಿಕ ಒಳಚರಂಡಿ (Drainage) ವ್ಯವಸ್ಥೆ ಹಾಗೂ ಸಾರ್ವಜನಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಉಷಾ ಅಂಚನ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದು, ಕಡಬದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುವಂತೆ ಸಚಿವರಲ್ಲಿ ವಿನಂತಿಸಿದರು. ಮನವಿಯನ್ನು ಸ್ವೀಕರಿಸಿದ ಸಚಿವರು, ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.
