
ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಹಕಾರಿ ಸಂಘದ ಸಿಬ್ಬಂದಿ ಸದಾನಂದ ಆಚಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿ ಗಂಭೀರ ಗಾಯಗೊಂಡಿದ್ದಾರೆ


ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಇಂದು (ಮೇ 10) ಅಪರಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಸ್ವರೂಪದ ಗಾಯಗಳಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸರಫಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸದಾನಂದ ಆಚಾರ್ (59) ಎಂದು ಗುರುತಿಸಲಾಗಿದೆ.


ಪತ್ನಿ ಸ್ಥಿತಿ ಗಂಭೀರ: ಬೈಕ್ನಲ್ಲಿದ್ದ ಅವರ ಪತ್ನಿ ಉಷಾ ಆಚಾರ್ಯ ಅವರಿಗೂ ಬಲವಾದ ಪೆಟ್ಟು ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ವಾಹನ ಸವಾರರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಸುಮಾರು ಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಪ್ರಕ್ರಿಯೆ ನಡೆಯುತ್ತಿದೆ.
