NEET UG Exam Cancelled:ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳಿಗೆ ಬಿಗ್ ಶಾಕ್: ನೀಟ್ ಯುಜಿ ಪರೀಕ್ಷೆ ರದ್ದು

kadaba times

ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ಮೇ 3 ರಂದು ನಡೆದಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (NEET UG) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಅಧಿಕೃತವಾಗಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಕುರಿತು ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

kadaba times
uniq

ಮೇ 3 ರಂದು ನಡೆದಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಪರೀಕ್ಷೆಗೂ ಮುನ್ನವೇ ಕೆಲವು ಕಡೆಗಳಲ್ಲಿ ಸೋರಿಕೆಯಾಗಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿದ್ದವು. ಈ ಬಗ್ಗೆ ಸಲ್ಲಿಕೆಯಾದ ದಾಖಲೆಗಳು ಮತ್ತು ಪ್ರಾಥಮಿಕ ತನಿಖಾ ವರದಿಗಳನ್ನು ಪರಿಶೀಲಿಸಿದ ಎನ್‌ಟಿಎ, ಪರೀಕ್ಷೆಯ ಪಾರದರ್ಶಕತೆ ಮತ್ತು ಪಾವಿತ್ರ್ಯತೆಯನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಹಿಂದಿನ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ.

ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗಾಗಿ ವರ್ಷಗಟ್ಟಲೆ ಸಿದ್ಧತೆ ನಡೆಸಿದ್ದರು. ಪರೀಕ್ಷೆ ರದ್ದತಿಯಿಂದಾಗಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ದೊಡ್ಡ ಆಘಾತ ಉಂಟಾಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪದೋಷಗಳ ವಿರುದ್ಧ ಹಲವು ವಿದ್ಯಾರ್ಥಿ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿವೆ.

kadaba times
kadaba times

ಪರೀಕ್ಷೆ ರದ್ದುಗೊಳಿಸಿರುವ ಬೆನ್ನಲ್ಲೇ ಎನ್‌ಟಿಎ ಮರು ಪರೀಕ್ಷೆಯ ಬಗ್ಗೆ ಸ್ಪಷ್ಟನೆ ನೀಡಿದೆ. ಅರ್ಹ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಮರು ಪರೀಕ್ಷೆಯನ್ನು ನಡೆಸಲಾಗುವುದು ಮತ್ತು ಅದರ ಅಧಿಕೃತ ವೇಳಾಪಟ್ಟಿ ಹಾಗೂ ಹೊಸ ದಿನಾಂಕಗಳನ್ನು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ನಲ್ಲಿ (exams.nta.ac.in/NEET) ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಗಾಗಿ ಎನ್‌ಟಿಎ ವೆಬ್‌ಸೈಟ್ ಅನ್ನು ನಿರಂತರವಾಗಿ ಗಮನಿಸುತ್ತಿರಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Latest Articles