
ಕಡಬ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಅಲಂಕಾರು ಗ್ರಾಮದ ನಿವಾಸಿ ಜಗದೀಶ ಕುಂಬಾರ @ ಜಗ್ಗ (43) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
14 ವರ್ಷದ ಅಪ್ರಾಪ್ತ ಬಾಲಕಿಯು ನೆರೆಹೊರೆಯವರ ಮನೆಗೆ ಟಿವಿ ನೋಡಲು ಹೋಗಿದ್ದಳು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿ ಬಾಲಕಿಗೆ ಮಾನಭಂಗ ಮಾಡುವ ಉದ್ದೇಶದಿಂದ ಕೈಯನ್ನು ಹಿಡಿದು ಎಳೆದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿ ಸ್ಥಳದಿಂದ ಪರಾರಿಯಾಗಿದ್ದ ಎನ್ನಲಾಗಿದೆ.


ಮಧ್ಯಾಹ್ನ ಕೂಲಿ ಕೆಲಸ ಮುಗಿಸಿ ಮನೆಗೆ ಮರಳಿದ ಬಾಲಕಿಯ ತಾಯಿ, ಮಗಳು ಅಳುತ್ತಿರುವುದನ್ನು ಕಂಡು ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ತಾಯಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 53/2026 ರಂತೆ, ಪೋಕ್ಸೋ ಕಾಯ್ದೆ 2012 (U/s-8) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023 (U/s-351(3)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
