
ಸಾಮಾಜಿಕ ಜಾಲತಾಣಗಳಲ್ಲಿ ಎರಡು ಜಾತಿ ಸಮುದಾಯಗಳ ಕುರಿತು ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಆರೋಪಿ ಅನಿತಾ ಕಾಸರಗೋಡು ಅವರನ್ನು ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಪೂಜಾರಿ ಅವರು ನೀಡಿದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಮಂಗಳೂರಿನ ಬರ್ಕೆ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನಲ್ಲಿರುವ ತನ್ನ ಸಹೋದರಿಯ ನಿವಾಸದಲ್ಲಿ ತಂಗಿದ್ದ ಆರೋಪಿ ಅನಿತಾ ಅವರನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.


ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಧೀಶರು ಜೂನ್ 25ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸೌಹಾರ್ದತೆ ಕೆಡಿಸುವ ನಿಟ್ಟಿನಲ್ಲಿ ಪೋಸ್ಟ್ ಹಾಕಿದ್ದ ಆರೋಪಿಯ ಬಂಧನಕ್ಕೆ ವ್ಯಾಪಕ ಒತ್ತಾಯ ಕೇಳಿಬಂದಿತ್ತು.
