ಕಡಬದ ಮಹಿಳೆಗೆ ಲೈಂಗಿಕ ಕಿರುಕುಳ ಪ್ರಕರಣ: ಫಾರ್ಮಸಿ ಅಧಿಕಾರಿ ಸಸ್ಪೆಂಡ್

kadaba times

ಬೆಳ್ತಂಗಡಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿದ್ದ ಫಾರ್ಮಸಿ ಅಧಿಕಾರಿ (ಔಷಧಿ ವಿಭಾಗದ ಮುಖ್ಯಸ್ಥ) ಚಂದ್ರಶೇಖರ್ ಅವರನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ  ಆದೇಶ ಹೊರಡಿಸಿದೆ.

kadaba times
uniq
ಪ್ರಕರಣದ ಹಿನ್ನೆಲೆ ಮತ್ತು ಕಿರುಕುಳದ ದೂರು:

ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿಯಾಗಿರುವ ಚಂದ್ರಶೇಖರ್, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ವಿಭಾಗದ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿದ್ದ. ಈ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಗ್ರೂಪ್-ಡಿ ಹಾಗೂ ಶುಶ್ರೂಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ, ಮೂಲತಃ ಕಡಬದ ಗ್ರಾಮವೊಂದರ  ಮಹಿಳೆಯೊಬ್ಬರಿಗೆ ಈತ ಆಸ್ಪತ್ರೆಯ ಔಷಧಾಲಯದ ಉಗ್ರಾಣದಲ್ಲಿ (Store room) ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಅಲ್ಲದೆ, ಈ ಮರ್ಯಾದಾಹೀನ ಕೃತ್ಯದ ವಿಚಾರವನ್ನು ಎಲ್ಲಾದರೂ ಹೊರಗೆ ಅಥವಾ ಬೇರೆಯವರ ಜೊತೆ ಹೇಳಿಕೊಂಡರೆ ಕೆಲಸದಿಂದ ವಜಾ ಮಾಡುವುದಾಗಿ ಸಂತ್ರಸ್ತೆಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕಿರುಕುಳ ತಾಳಲಾರದೆ ಮಹಿಳಾ ಸಿಬ್ಬಂದಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದು, ಪೊಲೀಸರು ಆರೋಪಿ ಚಂದ್ರಶೇಖರ್ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದರು. ಸದ್ಯ ನ್ಯಾಯಾಲಯವು ಆತನಿಗೆ ಜಾಮೀನು ಮಂಜೂರು ಮಾಡಿದೆ.

ಇಲಾಖೆಯಿಂದ ಅಮಾನತು:

ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಘಟನೆ ಕುರಿತು ಸುದೀರ್ಘ ತನಿಖೆ ನಡೆಸಿ ವರದಿ ಸಲ್ಲಿಸಿದ್ದರು. ಈ ವರದಿ, ಸಾಕ್ಷಿದಾರರ ಲಿಖಿತ ಹೇಳಿಕೆಗಳು ಹಾಗೂ ಲಭ್ಯವಿರುವ ತನಿಖಾ ದಾಖಲೆಗಳನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಕೂಲಂಕಷವಾಗಿ ಪರಿಶೀಲಿಸಿದೆ. ಆರೋಪಿಯು ಎಸಗಿರುವ ಕೃತ್ಯವು ಮೇಲ್ನೋಟಕ್ಕೆ ಸಾಬೀತಾಗಿರುವುದನ್ನು ಪರಿಗಣಿಸಿ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

kadaba times
kadaba times

ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳಡಿ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಚಂದ್ರಶೇಖರ್‌ನನ್ನು ಅಮಾನತುಗೊಳಿಸಲಾಗಿದೆ. ಅಮಾನತ್ತಿನ ಅವಧಿಯಲ್ಲಿ ಆತನ ಲೀನ್ (Lean) ಅನ್ನು ಹಾಸನ ಜಿಲ್ಲೆಯ ಸಾಲಗಾಮೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.

ಕೇಂದ್ರ ಸ್ಥಾನ ತೊರೆಯದಂತೆ ಕಟ್ಟುನಿಟ್ಟಿನ ಸೂಚನೆ:

ನಿಯಮಾನುಸಾರ ಅಮಾನತ್ತಿನ ಅವಧಿಯಲ್ಲಿ ಜೀವನಾಧಾರ ಭತ್ಯೆ ಪಡೆಯಲು ಆತ ಅರ್ಹನಾಗಿದ್ದರೂ, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಕಾರಣಕ್ಕೂ ನಿಯೋಜಿತ ಕೇಂದ್ರ ಸ್ಥಾನವನ್ನು ತೊರೆಯಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಖಡಕ್ ಆದೇಶವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕಿಯಾದ ಡಾ. ರಜನಿ ಎಂ. ಅವರು ಜೂನ್ 23ರಂದು ಅಧಿಕೃತವಾಗಿ ಹೊರಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲೇ ಮಹಿಳಾ ಸಿಬ್ಬಂದಿಗೆ ರಕ್ಷಣೆ ಇಲ್ಲದಂತೆ ಮಾಡಿದ ಅಧಿಕಾರಿಗೆ ಇಲಾಖೆ ತಕ್ಕ ಶಾಸ್ತಿ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ.

Related Articles

Latest Articles