ಶಾಸಕ ಯಶ್‌ಪಾಲ್ ಸುವರ್ಣ ಕಚೇರಿಗೆ ಮುತ್ತಿಗೆ ಯತ್ನ | ಕಾಂಗ್ರೆಸ್ ಮುಖಂಡರು ಪೊಲೀಸರ ವಶಕ್ಕೆ

kadaba times

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು

kadaba times
uniq

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಶಾಸಕ ಯಶ್‌ಪಾಲ್ ಸುವರ್ಣ ದ್ವೇಷಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ನಡೆಸಲಾದ ಕಚೇರಿ ಮುತ್ತಿಗೆ ಚಳವಳಿ ತೀವ್ರ ಘರ್ಷಣೆಗೆ ಕಾರಣವಾಯಿತು. ಶಾಸಕರ ಕಚೇರಿಗೆ ನುಗ್ಗಲು ಯತ್ನಿಸಿದ ಯುವ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಕುರಿತು ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಜೋಡುಕಟ್ಟೆಯಿಂದ ಶಾಸಕರ ಕಚೇರಿಯತ್ತ ರ‍್ಯಾಲಿ ನಡೆಸಿ, ಆಕ್ರೋಶದ ಘೋಷಣೆಗಳನ್ನು ಕೂಗಿದರು.

ಬಿಜೆಪಿ-ಕಾಂಗ್ರೆಸ್ ವಾಗ್ದಾಳಿ: 
ಯುವ ಕಾಂಗ್ರೆಸ್ ಪ್ರತಿಭಟನೆಯ ಸುಳಿವು ಸಿಗುತ್ತಿದ್ದಂತೆ ಶಾಸಕ ಯಶ್‌ಪಾಲ್ ಸುವರ್ಣ ಅವರ ಕಚೇರಿ ಬಳಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಜಮಾಯಿಸಿದ್ದರು. ಜೋಡುಕಟ್ಟೆಯಿಂದ ಆಗಮಿಸಿದ ಯುವ ಕಾಂಗ್ರೆಸ್ ನಾಯಕರು ಶಾಸಕರ ಕಚೇರಿಗೆ ನುಗ್ಗಲು ಯತ್ನಿಸಿದಾಗ, ಕಚೇರಿಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಪ್ರತಿಯಾಗಿ  ಘೋಷಣೆಗಳನ್ನು ಕೂಗಿದರು.

kadaba times
kadaba times

ಪರಸ್ಪರ ಎರಡೂ ಪಕ್ಷಗಳ ಕಾರ್ಯಕರ್ತರು ಘೋಷಣೆ ಕೂಗಿ ಮುಖಾಮುಖಿಯಾದಾಗ ಸ್ಥಳದಲ್ಲಿ ತೀವ್ರ ಉದ್ವಿಗ್ನತೆ ಹಾಗೂ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಪೊಲೀಸ್ ಬಂದೋಬಸ್ತ್ ಮತ್ತು ಬಂಧನ: ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ನಗರದ ಜೋಡುಕಟ್ಟೆ ಹಾಗೂ ಶಾಸಕರ ಕಚೇರಿ ಸುತ್ತಮುತ್ತಲಿ ಬೆಳಿಗ್ಗೆಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರತಿಭಟನಾಕಾರರು ಶಾಸಕರ ಕಚೇರಿಯತ್ತ ನುಗ್ಗಲು ಯತ್ನಿಸುತ್ತಿದ್ದಂತೆಯೇ ರಸ್ತೆ ತಡೆದ ಪೊಲೀಸರು, ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದರು. ಬಳಿಕ ಅವರನ್ನು ಪೊಲೀಸ್ ವಾಹನಗಳಲ್ಲಿ ಕರೆದೊಯ್ಯುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Related Articles

Latest Articles