
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರು ಕಡಬ, ಪುತ್ತೂರು, ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕು ಕಚೇರಿಗಳಿಗೆ ಏಕಕಾಲದಲ್ಲಿ ದಿಢೀರ್ ಭೇಟಿ ನೀಡಿ ಕಡತಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಬಾಕಿ ಇರುವ ಅರ್ಜಿಗಳು ಹಾಗೂ ಸಾರ್ವಜನಿಕರ ದೂರುಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಕಲೆಹಾಕಿದ್ದಾರೆ.


ಕಡಬ / ಮಂಗಳೂರು: ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸೇರಿದಂತೆ ಒಂಬತ್ತು ತಾಲೂಕು ಕಚೇರಿಗಳಿಗೆ ಏಕಕಾಲದಲ್ಲಿ ದಿಢೀರ್ ಭೇಟಿ ನೀಡಿ, ಕಡತ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಕಡಬ ತಾಲೂಕು ಕಚೇರಿಗೆ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳ ತಂಡ, ಕಚೇರಿಯಲ್ಲಿನ ಸಾರ್ವಜನಿಕರ ಕಡತಗಳ ವಿಲೇವಾರಿ, ದೀರ್ಘಕಾಲದಿಂದ ಬಾಕಿ ಉಳಿದಿರುವ ಅರ್ಜಿಗಳು ಹಾಗೂ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ವಶಕ್ಕೆ ಪಡೆದು ಕೂಲಂಕಷವಾಗಿ ಪರಿಶೀಲಿಸಿದ್ದಾರೆ.


9 ತಾಲೂಕು ಕಚೇರಿಗಳಿಗೆ ಏಕಕಾಲದಲ್ಲಿ ಭೇಟಿ
ಲೋಕಾಯುಕ್ತದಲ್ಲಿ ಸಲ್ಲಿಕೆಯಾಗಿರುವ ಪ್ರಕರಣದ ತನಿಖೆಯ ಭಾಗವಾಗಿ ಅಗತ್ಯ ದಾಖಲೆಗಳು ಹಾಗೂ ಸಾಕ್ಷ್ಯಧಾರಗಳನ್ನು ಸಂಗ್ರಹಿಸುವ ಉದ್ದೇಶದಿಂದ ಜಿಲ್ಲೆಯ ಪ್ರಮುಖ ತಾಲೂಕು ಕಚೇರಿಗಳಾದ ಕಡಬ,ಪುತ್ತೂರು,ಸುಳ್ಯ,ಬೆಳ್ತಂಗಡಿ,ಬಂಟ್ವಾಳ,ಮಂಗಳೂರು,ಮೂಡಬಿದರೆ, ಮುಲ್ಕಿ ಸೇರಿದಂತೆ ಒಟ್ಟು ಒಂಬತ್ತು ತಾಲೂಕು ಕಚೇರಿಗಳಿಗೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಡಿವೈಎಸ್ಪಿ ಮಾರ್ಗದರ್ಶನದಲ್ಲಿ ದಾಳಿ
ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಅವರ ಮಾರ್ಗದರ್ಶನದಲ್ಲಿ, ಇನ್ಸ್ಪೆಕ್ಟರ್ ವಿನಾಯಕ ಬಿಲ್ಲವ ಅವರ ನೇತೃತ್ವದ ಏಳು ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡವು ಈ ಕಾರ್ಯಾಚರಣೆ ನಡೆಸಿದೆ. ಸ್ಥಳದಲ್ಲಿದ್ದ ಸಾರ್ವಜನಿಕರಿಂದಲೂ ಕಚೇರಿಯ ಕೆಲಸ-ಕಾರ್ಯಗಳ ಬಗ್ಗೆ ಅಗತ್ಯ ಮಾಹಿತಿ ಹಾಗೂ ದೂರುಗಳನ್ನು ಕಲೆಹಾಕಿದ ಅಧಿಕಾರಿಗಳು, ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ.
