
80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸವಿನೆನಪಿಗಾಗಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಳಾರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ರಾಘವ ಕಳಾರ ಅವರು ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ. ಜೊತೆಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಗೆ ಸಿಹಿತಿಂಡಿಯ ವ್ಯವಸ್ಥೆಯನ್ನೂ ಕಲ್ಪಿಸಿದ್ದಾರೆ.


ಕಡಬ:ದೇಶದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಸವಿನೆನಪಿಗಾಗಿ, ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಳಾರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ರಾಘವ ಕಳಾರ ಅವರು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿ ಅಭಿಮಾನ ಮೆರೆದಿದ್ದಾರೆ.
ಶಾಲೆಯ ಪ್ರಭಾರ ಮುಖ್ಯ ಗುರುಗಳಾದ ಹಾಲೇಶ್ ನಾಯಕ್ ಅವರಿಗೆ ರಾಘವ ಕಳಾರ ಅವರು ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಸ್ತಾಂತರಿಸಿದರು. ಇದೇ ವೇಳೆ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವ ಶಾಲಾ ಮುದ್ದು ಮಕ್ಕಳಿಗಾಗಿ ಸಿಹಿತಿಂಡಿಯ ವ್ಯವಸ್ಥೆಯನ್ನೂ ಮಾಡಿಕೊಟ್ಟರು.
ಸರ್ಕಾರಿ ಶಾಲೆಗಳ ಉಳಿವಿಗಾಗಿ ಹಳೆ ವಿದ್ಯಾರ್ಥಿಗಳು ಕೈಜೋಡಿಸಿ


ಈ ಸಂದರ್ಭದಲ್ಲಿ ಮಾತನಾಡಿದ ಹಳೆ ವಿದ್ಯಾರ್ಥಿ ರಾಘವ ಕಳಾರ ಅವರು, “ನಾನು 1993 ರಿಂದ 1996 ರವರೆಗೆ 4ನೇ ತರಗತಿಯವರೆಗೆ ಇದೇ ಕಳಾರ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದೆ. ಇಂದು ನಾನು ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆದು ಗುರುತಿಸಿಕೊಳ್ಳಲು ನಾನು ಕಲಿತ ಈ ಸರ್ಕಾರಿ ಶಾಲೆಯೇ ಮುಖ್ಯ ಕಾರಣ. ನಾನು ಸಣ್ಣ ಕೊಡುಗೆ ನೀಡಿದ್ದು ಯಾವುದೇ ಪ್ರಚಾರಕ್ಕಾಗಿ ಅಲ್ಲ. ಇಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಆತಂಕದ ಸಂದರ್ಭದಲ್ಲಿ, ಪ್ರತಿಯೊಬ್ಬ ಹಳೆ ವಿದ್ಯಾರ್ಥಿಗಳೂ ತಾವು ಕಲಿತ ಶಾಲೆಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಶಾಲೆಗಳನ್ನು ಉಳಿಸಿ, ಬೆಳೆಸುವ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು ಎಂಬುದು ನನ್ನ ಆಶಯ” ಎಂದು ತಿಳಿಸಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ಶಾಲೆಯ ಮಕ್ಕಳು ಹಾಜರಿದ್ದರು.
