
ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್ ಸಮೀಪವಿರುವ ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಕೀರ್ಣದಲ್ಲಿ ಇಂದು ಮಧ್ಯಾಹ್ನ ಭಾರಿ ಸ್ಫೋಟದೊಂದಿಗೆ ಬೆಂಕಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಎಂಟು ಮಂದಿ ಸಿಬ್ಬಂದಿ ಗಾಯಗೊಂಡಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.


ಮಧ್ಯಾಹ್ನ 12:15ಕ್ಕೆ ಘಟಿಸಿದ ಅವಘಡ: ಇಂದು ಮಧ್ಯಾಹ್ನ ಸುಮಾರು 12:15 ರ ವೇಳೆಗೆ ಎಂಆರ್ಪಿಎಲ್ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ (CHTU) ಈ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ಬೆನ್ನಲ್ಲೇ ಘಟಕದಲ್ಲಿ ದಟ್ಟ ಹೊಗೆ ಹಾಗೂ ಬೆಂಕಿಯ ಕೆನ್ನಾಲಿಗೆ ಆವರಿಸಿಕೊಂಡಿತ್ತು.
ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಘಟಕದ ಒಳಗಿದ್ದ ಇಬ್ಬರು ಸಿಬ್ಬಂದಿ ನೇರವಾಗಿ ಬೆಂಕಿಯ ಜ್ವಾಲೆಗೆ ಸಿಲುಕಿ ಗಾಯಗೊಂಡಿದ್ದಾರೆ. ಈ ಪೈಕಿ ರಾಜೇಶ್ ಬ್ಯಾಪ್ಟಿಸ್ಟ್ ಎಂಬ ಸಿಬ್ಬಂದಿಗೆ ಶೇ. 35 ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ನಗರದ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರು ಮಂದಿಗೆ ಸಣ್ಣಪುಟ್ಟ ಗಾಯ – ಮಹಿಳಾ ಸಿಬ್ಬಂದಿ ಇರಲಿಲ್ಲ:


ಸ್ಫೋಟ ಸಂಭವಿಸಿದ ಘಟಕದ ಪಕ್ಕದಲ್ಲಿದ್ದ ಕಚೇರಿ ಕೊಠಡಿಯಲ್ಲಿದ್ದ ಇತರ ಆರು ಮಂದಿ ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅವಘಡ ಸಂಭವಿಸಿದ ಜಾಗದಲ್ಲಿ ಯಾವುದೇ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಯಾರಿಗೂ ಅಪಾಯವಾಗಿಲ್ಲ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ತುರ್ತು ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಹಾಗೂ ರಕ್ಷಣಾ ದಳವು ಸತತ ಶ್ರಮದಿಂದ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರ ಭೇಟಿ: ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಭಾರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ನಿಖರವಾದ ತಾಂತ್ರಿಕ ದೋಷವೇನು ಎಂಬ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ತಜ್ಞರ ತಂಡದಿಂದ ಸಮಗ್ರ ತನಿಖೆ ನಡೆಯುತ್ತಿದೆ.
