
ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕವು 25ನೇ ವರ್ಷದ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು, 2026–2027ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಅಕ್ಟೋಬರ್ 8 ರಿಂದ 14ರ ವರೆಗೆ ಕಾಲೇಜು ಆವರಣದಲ್ಲಿ ಆಯೋಜನೆಗೊಂಡಿದೆ. “ನಶಾ ಮುಕ್ತ ಭಾರತ” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯಲಿರುವ ಈ ಶಿಬಿರವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಅ.8ರಂದು ಉದ್ಘಾಟಿಸಲಿದ್ದಾರೆ.


ಕಡಬ: ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ (ಎನ್ಎಸ್ಎಸ್) ಘಟಕದ ವತಿಯಿಂದ 25ನೇ ವರ್ಷದ ಬೆಳ್ಳಿಹಬ್ಬದ ಅಂಗವಾಗಿ 2026–2027ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಅಕ್ಟೋಬರ್ 8 ರಿಂದ 14ರ ವರೆಗೆ ಕಾಲೇಜು ಆವರಣದಲ್ಲಿ ನಡೆಯಲಿದೆ.
‘ನಶಾ ಮುಕ್ತ ಭಾರತ’ ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಲಾಗಿರುವ ಈ ಶಿಬಿರವನ್ನು ಅಕ್ಟೋಬರ್ 8ರ ಗುರುವಾರ ಅಪರಾಹ್ನ 2:00 ಗಂಟೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಿ. ದೇವರಾಜು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬೀನ್, ಸದಸ್ಯ ಕೃಷ್ಣಪ್ಪ ಬೈಲಂಗಡಿ, ತಹಶೀಲ್ದಾರ್ ಗಣೇಶ್ ಜೆ. ಸವಣೂರು, ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕಿ ರಾಜೇಶ್ವರಿ ಹೆಚ್.ಹೆಚ್., ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಚಾಡಿ, ಕಡಬ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಜಿ.ಪಂ. ಮಾಜಿ ಸದಸ್ಯ ಪಿ.ಪಿ. ವರ್ಗೀಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.


ಏಳು ದಿನಗಳ ಕಾಲ ನಡೆಯಲಿರುವ ಶಿಬಿರದಲ್ಲಿ ಪ್ರತಿದಿನ ಬೆಳಿಗ್ಗೆ ಶ್ರಮದಾನ, ಅಪರಾಹ್ನ ಶೈಕ್ಷಣಿಕ ಉಪನ್ಯಾಸ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಶಿಬಿರದ ಅಂಗವಾಗಿ ಕುಂಬಾರಿಕೆ ಪ್ರಾತ್ಯಕ್ಷಿಕೆ, ರಕ್ತದಾನ ಶಿಬಿರ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಹಾಗೂ ರಂಗಕಲೆ ಕುರಿತು ಉಪನ್ಯಾಸಗಳು ನಡೆಯಲಿವೆ.
ಅಕ್ಟೋಬರ್ 14ರಂದು ಪೂರ್ವಾಹ್ನ 10:00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಬೆಳ್ಳಿಹಬ್ಬ ಆಚರಣಾ ಸಮಿತಿ ಅಧ್ಯಕ್ಷ ರವಿಚಂದ್ರ ಪಡುಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಕುಂದಾಪುರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಸುಕೇಶ್ ಚಂದ್ರಶೇಖರ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
